ಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧದ ಕಾರ್ಮೋಡ ದಟ್ಟವಾಗುತ್ತಿದೆ. ಪಾಕಿಸ್ತಾನವು ಭಾರತದ ಸಂಭಾವ್ಯ ದಾಳಿಯ ಭಯದಿಂದ ಯುದ್ಧ ಸಿದ್ಧತೆಯಲ್ಲಿ ತೊಡಗಿದ್ದರೆ, ಭಾರತವು ತಕ್ಕ ಪಾಠ ಕಲಿಸಲು ರಣತಂತ್ರ ರೂಪಿಸುತ್ತಿದೆ. ಈ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಆರ್‌ಎಸ್‌ಎಸ್ ಮುಖ್ಯಸ್ಥ ಮೋಹನ್ ಭಾಗವತ್ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ದೆಹಲಿಯ 7 ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿಗಳ ಅಧಿಕೃತ ನಿವಾಸದಲ್ಲಿ ಭೇಟಿಯಾಗಿದ್ದಾರೆ.
ನರೇಂದ್ರ ಮೋದಿ ಅವರು ರಕ್ಷಣಾ ಸಚಿವ ರಾಜನಾಥ್ ಸಿಂಗ್, ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಮತ್ತು ರಕ್ಷಣಾ ಸಿಬ್ಬಂದಿ ಮುಖ್ಯಸ್ಥ ಅನಿಲ್ ಚೌಹಾಣ್ ಸೇರಿದಂತೆ ಮೂರೂ ಸೇನೆಗಳ ಮುಖ್ಯಸ್ಥರ ಜೊತೆ ಮಹತ್ವದ ಚರ್ಚೆ ನಡೆಸಿದ್ದಾರೆ. ಈ ಸಭೆಯಲ್ಲಿ ಪಹಲ್ಗಾಮ್ ದಾಳಿಯ ನಂತರದ ಭದ್ರತಾ ಸಿದ್ಧತೆಗಳ ಬಗ್ಗೆ ವಿವರವಾಗಿ ಚರ್ಚಿಸಲಾಗಿದೆ. ಪ್ರಧಾನಿಯವರು ಸೇನೆಗೆ ಸಂಪೂರ್ಣ ಕಾರ್ಯಾಚರಣೆಯ ಸ್ವಾತಂತ್ರ್ಯ ನೀಡಿದ್ದಾರೆ ಎಂದು ಮೂಲಗಳು ತಿಳಿಸಿವೆ.