ಬೆಂಗಳೂರು: ರಾಜ್ಯದಲ್ಲಿ ಸದ್ಯಕ್ಕೆ ಕೊರೋನಾದಿಂದ ಯಾವುದೇ ಭಯವಿಲ್ಲ. ಆದರೆ, ಪರಿಸ್ಥಿತಿ ಎದುರಿಸಲು ಸಕಲ ಸಿದ್ಧತೆ ನಡೆಸಲಾಗಿದೆ. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರ ಹೇಳಿದರು.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂತಹ ಪರಿಸ್ಥಿತಿ ಎದುರಾದರೂ ಎದುರಿಸಲು ಸಿದ್ಧರಾಗಿರಬೇಕು. ವೆಂಟಿಲೇಟರ್, ಆಮ್ಲಜನಕ, ವಾರ್ಡ್ ಗಳಿಗೆ ತೊಂದರೆಯಾಗದಂತೆ ಕ್ರಮ ತೆಗೆದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಲಾಗಿದೆ. ಸುಮಾರು 65 ಇದ್ದ ಪ್ರಕರಣಗಳು 80 ಆಗಿವೆ. ಇದು ಗಂಭೀರವಾದ ತಳಿಯಲ್ಲ. ನೆಗಡಿ, ಕೆಮ್ಮು, ಜ್ವರ ಬಂದಿರುವ ಮಕ್ಕಳನ್ನು ಶಾಲೆಗೆ ಕಳುಹಿಸಬಾರದು ಹಾಗೂ ವೃದ್ಧರು, ವಿವಿಧ ಕಾಯಿಲೆಗಳಿಗೆ ತುತ್ತಾಗಿರರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ಲಸಿಕೆಗಳನ್ನು ಮುನ್ನೆಚ್ಚರಿಕಾ ಕ್ರಮವಾಗಿ ಸಂಗ್ರಹಿಸಬೇಕು ಎಂದು ಸೂಚಿಸಲಾಗಿದೆ ಎಂದು ಹೇಳಿದರು.
ಎಲ್ಲರೂ ಮಾಸ್ಕ್ ಧರಿಸುವುದನ್ನು ಕಡ್ಡಾಯ ಮಾಡಿಲ್ಲ. ಆದರೆ ವೃದ್ಧರು, ಕಾಯಿಲೆಯಿರುವವರು ಮಾಸ್ಕ್ ಕಡ್ಡಾಯವಾಗಿ ಹಾಕಿಕೊಳ್ಳುವಂತೆ ಸೂಚಿಸಲಾಗಿದೆ. ವಿಮಾನ ನಿಲ್ದಾಣಗಳಲ್ಲಿ ತಪಾಸಣೆ ಮಾಡಲು ಕೇಂದ್ರದಿಂದ ಇನ್ನೂ ಸೂಚನೆ ಬಂದಿಲ್ಲ, ಆದರೂ ಎಚ್ಚರಿಕೆ ವಹಿಸಲಾಗುವುದು ಎಂದು ತಿಳಿಸಿದರು