ಕರ್ನಾಟಕ ರಾಜ್ಯ ಮದ್ಯಪಾನ ಸಂಯಮ ಮಂಡಳಿ, ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ಬೆಂಗಳೂರಿನ ಕರ್ನಾಟಕ ಗಾಂಧೀ ಸ್ಮಾರಕ ನಿಧಿ, ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ ಹಾಗೂ ರಾಷ್ಟ್ರೀಯ ಸೇವಾ ಯೋಜನೆ ಇವರ ಸಂಯುಕ್ತಾಶ್ರಯದಲ್ಲಿ, ಚಿತ್ತರಗಿ ಇಳಕಲ್ ಶ್ರೀ ವಿಜಯಮಹಂತೇಶ್ವರ ಸಂಸ್ಥಾನದ ಪೂಜ್ಯ ಶ್ರೀ ಶ್ರೀ ಶ್ರೀ ಮ.ನಿ.ಪ್ರ. ಡಾ. ಮಹಾಂತ ಶಿವಯೋಗಿಗಳ ಜಯಂತಿ ಪ್ರಯುಕ್ತ “ವ್ಯಸನಮುಕ್ತ ದಿನಾಚರಣೆ”ಯನ್ನು 2025ರ ಆಗಸ್ಟ್ 1 ರಂದು ಬೆಳಿಗ್ಗೆ 11 ಗಂಟೆಗೆ ಬೆಂಗಳೂರಿನ ಕುಮಾರ ಪಾರ್ಕ್ ಬಳಿಯಿರುವ ಗಾಂಧೀಭವನದ ಮಹಾದೇವ ದೇಸಾಯಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ವ್ಯಸನಮುಕ್ತ ದಿನಾಚರಣೆ ಅಂಗವಾಗಿ ಅಂದು ಬೆಳಿಗ್ಗೆ 9.30 ಗಂಟೆಗೆ ಮೌರ್ಯ ಸರ್ಕಲ್ ಗಾಂಧೀ ಪ್ರತಿಮೆಯಿಂದ ಗಾಂಧೀ ಭವನದವೆರೆಗೆ ಜಾಗೃತಿ ಜಾಥಾ ಆಯೋಜಿಸಲಾಗಿದೆ. ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದು, ಇಳಕಲ್ ಚಿತ್ತರಗಿ ಶ್ರೀ ವಿಜಯಮಹಾಂತೇಶ್ವರ ಸಂಸ್ಥಾನ ಮಠದ ಪೂಜ್ಯ ಶ್ರೀ ಮ.ನಿ.ಪ್ರ. ಗುರುಮಹಾಂತ ಸ್ವಾಮಿಗಳು ದಿವ್ಯ ಸಾನಿಧ್ಯ ವಹಿಸಲಿದ್ದಾರೆ.
ಕೇಂದ್ರ ಸರ್ಕಾರದ ಹಣಕಾಸು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತರಾಮನ್ ಹಾಗೂ ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಕು.ಶೋಭಾ ಕರಂದ್ಲಾಜೆ ಅವರ ಘನ ಉಪಸ್ಥಿತಿಯಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಡಾ. ಮಹಾಂತ ಶಿವಯೋಗಿಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಿದ್ದಾರೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕರಾದ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಕರ್ನಾಟಕ ಗಾಂಧೀ ಸ್ಮಾರಕ ನಿಧಿಯ ಅಧ್ಯಕ್ಷರಾದ ನಾಡೋಜ ಡಾ. ವೂಡೇ ಪಿ. ಕೃಷ್ಣ ಅವರು ವಿಶೇಷ ಆಹ್ವಾನಿತರಾಗಿ ಭಾಗವಹಿಸಲಿದ್ದು, ಹಿರಿಯ ಮನೋವಿಜ್ಞಾನಿ ಡಾ.ಎ. ಶ್ರೀಧರ ಅವರು ವ್ಯಸನಮುಕ್ತ ಸಮಾಜ ವಿಷಯದ ಕುರಿತು ವಿಶೇಷ ಉಪನ್ಯಾಸ ನೀಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.