ಬೆಂಗಳೂರು, ಜುಲೈ 10 (ಕರ್ನಾಟಕ ವಾರ್ತೆ):
ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದಿಂದ ವಿಶೇಷ ಅಭಿಯಾನ - ಮಧ್ಯಸ್ಥಿಕೆ ರಾಷ್ಟ್ರಕ್ಕಾಗಿ-90 ದಿನಗಳ ಡ್ರೈವ್ ಅನ್ನು 2025 ರ ಜುಲೈ 1 ರಿಂದ ಅಕ್ಟೋಬರ್ 7 ರವರೆಗೆ ರಾಜ್ಯಾದ್ಯಂತ ಹಮ್ಮಿಕೊಳ್ಳಲಾಗಿದೆ.
ಈ ಅಭಿಯಾನದಲ್ಲಿ ನ್ಯಾಯಾಲಯಗಳಲ್ಲಿ ಬಾಕಿ ಇರುವ ಪ್ರಕರಣಗಳು ವೈವಾಹಿಕ ಹಾಗೂ ಕೌಟುಂಬಿಕ ನ್ಯಾಯಾಲಯದ ಪ್ರಕರಣಗಳು, ಮೋಟಾರು ಅಪಘಾತ ನ್ಯಾಯಾಧೀಕರಣದ ಪ್ರಕರಣಗಳು, ಚೆಕ್ಕು ಅಮಾನ್ಯದ ಪ್ರಕರಣಗಳು, ವಾಣಿಜ್ಯ ಪ್ರಕರಣಗಳು, ಸೇವಾ ಪ್ರಕರಣಗಳು, ರಾಜೀಯಾಗಬಲ್ಲ ಅಪರಾಧಿಕ ಪ್ರಕರಣಗಳು, ಗ್ರಾಹಕ ವ್ಯಾಜ್ಯ ಪ್ರಕರಣಗಳು, ಡಿ.ಆರ್.ಟಿ. ಪ್ರಕರಣಗಳು, ಪಾಲುದಾರಿಕೆ ಪ್ರಕರಣಗಳು, ಭೂ-ಸ್ವಾಧೀನ ಪ್ರಕರಣಗಳು ಹಾಗೂ ಇತರೆ ಸಿವಿಲ್ ಪ್ರಕರಣಗಳನ್ನು ಈ ಅಭಿಯಾನದಲ್ಲಿ ರಾಜೀ ಸಂಧಾನದ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಸುವರ್ಣಾವಕಾಶ ಕಲ್ಪಿಸಲಾಗಿದೆ.
ಸಾರ್ವಜನಿಕರು ತಮ್ಮ ಪ್ರಕರಣಗಳನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಳ್ಳಲು ಇಚ್ಛಿಸಿದ್ದಲ್ಲಿ ನ್ಯಾಯಾಲಯಗಳಿಂದ ಪ್ರಕರಣಗಳನ್ನು ಮಧ್ಯಸ್ಥಿಕೆ ಕೇಂದ್ರಕ್ಕೆ ಸೂಚಿಸಿಕೊಂಡಲ್ಲಿ ಅಂತಹ ಪ್ರಕರಣಗಳಲ್ಲಿ ಉಭಯ ಪಕ್ಷಗಾರರನ್ನು ಕರೆಸಿಕೊಂಡು ಜಿಲ್ಲಾ ನ್ಯಾಯಾಲಯದ ಸಮುಚ್ಚಯದಲ್ಲಿರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳ ಹಾಗೂ ತಾಲ್ಲೂಕು ನ್ಯಾಯಾಲಯಗಳ ಆವರಣಗಳಲ್ಲಿರುವ ಮಧ್ಯಸ್ಥಿಕೆ ಕೇಂದ್ರಗಳಲ್ಲಿ ರಾಜೀ ಸಂಧಾನ ಮೂಲಕ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಬಹುದು.
ಸಾರ್ವಜನಿಕರು ತಮ್ಮ ಪ್ರಕರಣಗಳು ಉಚ್ಚ ನ್ಯಾಯಾಲಯದಲ್ಲಿ ಬಾಕಿ ಇದ್ದಲ್ಲಿ ಗೌರವಾನ್ವಿತ ಉಚ್ಚ ನ್ಯಾಯಾಲಯ, ಬೆಂಗಳೂರು, ಧಾರವಾಡ ಮತ್ತು ಕಲಬುರಗಿ ಆವರಣಗಳಲ್ಲಿರುವ ಮಧ್ಯಸ್ಥಿಕೆ ಕೇಂದ್ರಗಳನ್ನು ಸಂಪರ್ಕಿಸಿ ಮಾಹಿತಿಯನ್ನು ಪಡೆದುಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ಜಾಲತಾಣ www.kslsa.kar.nic.in ಅಥವಾ ಹತ್ತಿರ ಇರುವ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರಗಳು ಅಥವಾ ತಾಲ್ಲೂಕು ಕಾನೂನು ಸೇವಾ ಸಮಿತಿಯ ಸದಸ್ಯ ಕಾರ್ಯದರ್ಶಿ ಅವರನ್ನು ಹಾಗೂ ಉಚ್ಚ ನ್ಯಾಯಾಲಯ ಕಾನೂನು ಸೇವಾ ಸಮಿತಿಯ ಕಾರ್ಯದರ್ಶಿ ಅವರನ್ನು ಸಂಪರ್ಕಿಸಬಹುದು ಅಥವಾ ನಾಲ್ಸಾ ಸಹಾಯವಾಣಿ ಸಂಖ್ಯೆ -15100 ನ್ನು ಸಂಪರ್ಕಿಸಬಹುದು ಎಂದು ಬೆಂಗಳೂರಿನ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹೆಚ್.ಶಶಿಧರ ಶೆಟ್ಟಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.