ಬೆಂಗಳೂರು, ಸೆಪ್ಟ್ಟೆಂಬರ್ 12 (ಬೆಂಗಳೂರು): ಕರ್ನಾಟಕ ಸರ್ಕಾರದ ವತಿಯಿಂದ ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಸಮಾರಂಭವನ್ನು ಸೆಪ್ಟೆಂಬರ್ 15ರಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌಧದ ಬ್ಯಾಂಕ್ವೆಟ್ ಹಾಲ್‍ನಲ್ಲಿ ಹಮ್ಮಿಕೊಳ್ಳಲಾಗಿದೆ.
ಸಮಾರಂಭವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಉದ್ಘಾಟಿಸಲಿದ್ದಾರೆ. ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಎಸ್ ಹೊರಟ್ಟಿ, ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಹಾಗೂ ಸಮಾಜ ಕಲ್ಯಾಣ ಸಚಿವ ಡಾ.ಹೆಚ್.ಸಿ. ಮಹದೇವಪ್ಪ ಅವರು ಉಪಸ್ಥಿತರಿರಲಿದ್ದಾರೆ.
ಕೇಂದ್ರ ಸರ್ಕಾರದ ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ಸಚಿವರಾದ ಶ್ರೀಮತಿ ನಿರ್ಮಲಾ ಸೀತರಾಮನ್ ಹಾಗೂ ಕೇಂದ್ರ ಸರ್ಕಾರದ ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಉದ್ಯಮಗಳು ಹಾಗೂ ಕಾರ್ಮಿಕ ಮತ್ತು ಉದ್ಯೋಗ ರಾಜ್ಯ ಸಚಿವರಾದ ಕು. ಶೋಭಾ ಕರಂದ್ಲಾಜೆ ಅವರು ಘನ ಉಪಸ್ಥಿತರಿರಲಿದ್ದಾರೆ. ಶಿವಾಜಿನಗರ ವಿಧಾನಸಭಾ ಕ್ಷೇತ್ರದ ಶಾಸಕ ರಿಜ್ವಾನ್ ಅರ್ಷದ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದಾರೆ. ಗೃಹ ಸಚಿವ ಡಾ.ಜಿ. ಪರಮೇಶ್ವರ, ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಪ್ರವಾಸೋದ್ಯಮ ಸಚಿವ ಹೆಚ್.ಕೆ. ಪಾಟೀಲ್, ಆಹಾರ ಮತ್ತು ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಹೆಚ್. ಮುನಿಯಪ್ಪ ಸೇರಿದಂತೆ ವಿವಿಧ ಇಲಾಖೆಗಳ ಸಚಿವರು ಭಾಗವಹಿಸಲಿದ್ದಾರೆ.
ಬೆಂಗಳೂರು ಕೇಂದ್ರ ಲೋಕಸಭಾ ಕ್ಷೇತ್ರದ ಸಂಸದರಾದ ಪಿ.ಸಿ. ಮೋಹನ್, ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರ ಲೋಕಸಭಾ ಸಂಸದರಾದ ಎಲ್.ಎಸ್. ತೇಜಸ್ವಿ ಸೂರ್ಯ ಸೇರಿದಂತೆ ಲೋಕಸಭಾ ಸದಸ್ಯರು, ರಾಜ್ಯಸಭಾ ಸದಸ್ಯರು ವಿಶೇಷ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.
ವಿಧಾನ ಪರಿಷತ್ ಸದಸ್ಯರಾದ ಬಿ.ಕೆ. ಹರಿಪ್ರಸಾದ್, ಪುಟ್ಟಣ್ಣ ಸೇರಿದಂತೆ ಇತರ ವಿಧಾನ ಪರಿಷತ್ ಸದಸ್ಯರು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.