ಬೆಳಗಾವಿ / ಬೆಂಗಳೂರು: ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳಲ್ಲಿನ ನೇರ ನೇಮಕಾತಿಯಡಿ ಖಾಲಿ ಇರುವ ಹುದ್ದೆಗಳನ್ನು ಆರ್ಥಿಕ ಇಲಾಖೆಯ ಅನುಮೋದನೆ ಪಡೆದ ನಂತರ ಕರ್ನಾಟಕ ಲೋಕ ಸೇವಾ ಆಯೋಗಕ್ಕೆ ಪ್ರಸ್ತಾವನೆ ಸಲ್ಲಿಸಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಪೌರಾಡಳಿತ ಸಚಿವರಾದ ರಹೀಂ ಖಾನ್ ಅವರು ಹೇಳಿದರು.ವಿಧಾನ ಪರಿಷತ್ತಿನ ಪ್ರಶ್ನೋತ್ತರ ವೇಳೆ ಸದಸ್ಯರಾದ ಹೇಮಲತಾ ನಾಯಕ ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಚಿವರು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರಸೇವಾ ನೌಕರರನ್ನು ರಾಜ್ಯ ಸರ್ಕಾರಿ ನೌಕರರೆಂದು ಪರಿಗಣಿಸುವ ಕುರಿತು ಪೌರ ನೌಕರರ ಸಂಘಗಳ ವತಿಯಿಂದ ಮನವಿಗಳು ಸ್ವೀಕೃತವಾಗಿದ್ದು, ಪರಿಶೀಲನಾ ಹಂತದಲ್ಲಿರುತ್ತದೆ.
ನಗರ ಕೆ.ಜಿ.ಐ.ಡಿ ಸ್ಥಳೀಯ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಪೌರ ಸೇವಾ ನೌಕರರಿಗೆ ಹಾಗೂ ಜ್ಯೋತಿ ಸಂಜೀವಿನಿ ಸೌಲಭ್ಯಗಳನ್ನು ಒದಗಿಸಲು ನಿಯಮಗಳಲ್ಲಿ ಅವಕಾಶವಿರುವುದಿಲ್ಲ ಎಂದು ಸಚಿವರು ಸ್ಪಷ್ಟಪಡಿಸಿದರು. ಮುಂದುವರೆದು, ನಗರ ಸ್ಥಳೀಯ ಸಂಸ್ಥೆಗಳಲ್ಲಿ ಅಕೌಂಟೆಂಡ್, ಜೂನಿಯರ್/ಸೀನಿಯರ್, ಪ್ರೋಗ್ರಾಮರ್ ವಾಹನ ಚಾಲಕರು, ಪ್ಲೆಂಬರ್ ಹಾಗೂ ಇತ್ಯಾದಿ ಹುದ್ದೆಗಳನ್ನು ಅವಶ್ಯಕತೆಗನುಗುಣವಾಗಿ ಗುತ್ತಿಗೆ/ಹೊರಗುತ್ತಿಗೆ ಆಧಾರದ ಮೇಲೆ ಜಿಲ್ಲಾ ಮಟ್ಟದಲ್ಲಿ ನೇಮಕಾತಿ ಮಾಡಿಕೊಳ್ಳಲು ಅವಕಾಶ ಕಲ್ಪಿಸಲಾಗಿರುತ್ತದೆ. ಅದರಂತೆ ಜಿಲ್ಲಾ ಮಟ್ಟದಲ್ಲಿ ಸ್ಥಳೀಯ ಸಂಸ್ಥೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲು ಕ್ರಮವಹಿಸಲಾಗುತ್ತಿದೆ ಎಂದು ಸಚಿವರು ತಿಳಿಸಿದರು.